ಬೆಂಗಳೂರು:ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸೋಮವಾರ ಸಂಜೆ ನೋಟಿಸ್ ನೀಡಲಾಗಿದೆ.
ಸದ್ಯ ದೆಹಲಿಯಲ್ಲಿರುವುದರಿಂದ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ವಕೀಲರ ಮೂಲಕ ಬಿ.ಎಸ್. ಯಡಿಯೂರಪ್ಪ ಉತ್ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿತ್ತು.
ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾಯಿಸಲಾಗಿತ್ತು. ಇತ್ತೀಚೆಗಷ್ಟೇ ದೂರು ದಾಖಲಿಸಿದ್ದ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.