ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಮಂಗಳವಾರ ರಾತ್ರಿ ನಿಗಮದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವಿಶ್ವೇಶ್ವರಯ್ಯ ಟವರ್ ಬಳಿಯಿರುವ ನಿಗಮದ ಕಚೇರಿ ಮೇಲೆ ದಾಳಿ ಮಾಡಿರುವ ಸಿಐಡಿ ತಂಡ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿದೆ. ಈ ವೇಳೆ ನಿಗಮದಲ್ಲಿದ್ದ ಕಂಪ್ಯೂಟರ್, ಕೆಲವು ಕಡತಗಳನ್ನು ಜಪ್ತಿ ಮಾಡಿದೆ. ಅಲ್ಲದೇ, ಸಿಬ್ಬಂದಿ ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿ, ಪ್ರಾಥಮಿಕ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಭೋವಿ ಅಭಿವೃದ್ದಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿತ್ತು. ಅಕ್ರಮ ಸಂಬಂಧ ಬೆಂಗಳೂರು, ಕಲಬುರಗಿಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಕೋಟ್ಯಂತರ ರೂ. ಅಕ್ರಮವಾಗಿದ್ದರಿಂದ ಕೆಲ ದಿನಗಳ ಹಿಂದಷ್ಟೇ ಸರ್ಕಾರ, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಾಥಮಿಕ ತನಿಖೆಯಲ್ಲಿ 60 ಕೋಟಿಗೂ ಹೆಚ್ಚು ಅಕ್ರಮ ನಡೆದಿರುವ ಮಾಹಿತಿ ದೊರೆತಿದ್ದು ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.