ಹುಬ್ಬಳ್ಳಿ:ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಶೀಘ್ರದಲ್ಲೇ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹತ್ಯೆ ನಡೆದಿತ್ತು. ಈ ಸಂಬಂಧ ಆರೋಪಿ ಯುವಕ ಫಯಾಜ್‌ನನ್ನು ಪೊಲೀಸರು ಬಂಧಿಸಿದ್ದರು.
ಘಟನೆ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸಿದ್ದವು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸಂಘಟನೆಗಳು ಆಗ್ರಹ ಮಾಡಿದ್ದವು. ಘಟನೆಯು ಸಾರ್ವಜನಿಕ ವಲಯದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಐಡಿ ತಂಡವನ್ನು ರಚನೆ ಮಾಡಿತ್ತು.