ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ ಸೇರಿ ಸಚಿವರು ಕಂಬನಿ ಮಿಡಿದಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ.ರಾಜ್‌ಕುಮಾರ್ ಮತ್ತು ಡಾ.ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು. ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಬೆಳೆಸಿದ್ದಾರೆ. ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವರುಗಳಿಂದ ಸಂತಾಪ:ದ್ವಾರಕೀಶ್ ನಿಧನರಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಂಬನಿ ಮಿಡಿದಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ ಕನ್ನಡ ಚಲನ ಚಿತ್ರರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ವಿಶಿಷ್ಟ ಅಭಿನಯದ ಮೂಲಕ ಅಭಿಮಾನಿಗಳಿಂದ 'ರಾಜಕುಳ್ಳ' ಎಂದು ಕರೆಸಿಕೊಂಡವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ , ದ್ವಾರಕೀಶ್ ಅವರು ಚಂದನವನದ ಅತ್ಯಂತ ಪ್ರತಿಭಾವಂತ ನಟ, ನಿರ್ಮಪಕ, ನಿರ್ದೇಶಕ, ಚಿತ್ರ ಸಾಹಿತಿ, ಕನ್ನಡದ ಕುಳ್ಳ ಎಂದೇ ಖ್ಯಾತರಾದ ದ್ವಾರಕೀಶ್ ಅವರ ಅಗಲಿಕೆಯಿಂದ ಕನ್ನಡ ಚಲನ ಚಿತ್ರರಂಗದ ಧೃವತಾರೆಯೊಂದು ಮರೆಯಾದಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದರು.