ಬೆಂಗಳೂರು:ನೀವು ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ಅನ್ಫಿಟ್ unfit ಎಂದು ಸಿಎಂ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದಾಗ, ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ ಎಂದು ತಿಳಿಸಿದರು. ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್.ಎಸ್.ಎಲ್.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.
2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಸ್ಟೆಲ್ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆಲವು ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಲು ಸಿಎಂ ಸೂಚಿಸಿದರು. ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಇದಕ್ಕಾಗಿ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲು ಆರ್ಥಿಕ ಇಲಾಖೆಗೆ ಸೂಚಿಸಿದರು.
ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳು ಇತರ ವಿದ್ಯಾರ್ಥಿಗಳೊಂದಿಗೆ ಸಮರ್ಥವಾಗಿ ಸ್ಪರ್ಧಿಸುವಂತಾಗಬೇಕು. ಸ್ಮಾರ್ಟ್ ಕ್ಲಾಸ್ಗಳ ವ್ಯವಸ್ಥೆ ಸದ್ಬಳಕೆ ಮಾಡಬೇಕು. ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.