ಬೆಂಗಳೂರು: ''ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹಚ್ಚಿರುವುದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಿಎಂ, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಡಿಯೋ ಟ್ಯಾಗ್ ಮಾಡಿ, ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ''ನನ್ನ ಪತ್ನಿ ಬದಲಿ ಭೂಮಿ ಕೇಳಿರುವುದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ 'ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ' ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೇ ಇದೆ'' ಎಂದು ತಿರುಗೇಟು ನೀಡಿದ್ದಾರೆ.