ಬೆಂಗಳೂರು: ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ?, ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?. ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?. ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?. RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ?. ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುತ್ತಿರುವುದು ಏಕೆ?. ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ?. ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಸಿಎಂ ತಿಳಿಸಿದರು.
ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಆರ್ಬಿಐ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದರು. ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ (ಐಡಿ ಕಾರ್ಡ್) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿದ್ದರಾಮಯ್ಯ ಕೇಳಿದರು.