ಕರ್ನಾಟಕ

karnataka

ETV Bharat / state

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ - KANNADA SAHITYA SAMMELANA

ಇಂದಿನಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು.

CM Siddaramaiah inagurated 87th akhila bharata kannada sahitya sammelana
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ (ETV Bharat)

By ETV Bharat Karnataka Team

Published : Dec 20, 2024, 4:05 PM IST

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಅತ್ಯಂತ ಅಭಿಮಾನ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ.ದೊಡ್ಡರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವೇದಿಕೆ ಮೇಲಿದ್ದರು.

ಈ ಸಂದರ್ಭದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌.ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ:ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬರುತ್ತಿದೆ. ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ತುಂಬಿಕೊಳ್ಳಲು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಜಿಲ್ಲಾಡಳಿತ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಮೆರವಣಿಗೆ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ಉದ್ಘಾಟನೆಗೂ ಮುನ್ನ ಅತಿಥಿಗಳು ಅದ್ಧೂರಿ ಸಾಂಸ್ಕೃತಿಕ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿದರು.

ಇದನ್ನೂ ಓದಿ:ಮಂಡ್ಯ: ಧ್ವಜಾರೋಹಣದ ಮೂಲಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ABOUT THE AUTHOR

...view details