ಬೆಂಗಳೂರು: 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿರುತ್ತದೆ ಎಂದರು.
7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ, ದಿನಾಂಕ 01.08.2024ರಿಂದ ಅನುಷ್ಠಾನಗೊಳಿಸಲು ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಅದರಂತೆ, ದಿನಾಂಕ 01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ.27.50ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿ ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ಸಿಎಂ ವಿವರಿಸಿದರು.