ಬೆಂಗಳೂರು: ಡೆಂಗ್ಯೂ ಹರಡದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಡಿಸಿ-ಸಿಇಒ ಸಭೆಯಲ್ಲಿ ಡೆಂಗ್ಯೂ ತಡೆಗೆ ಅಗತ್ಯ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. DC-CEO-DHO ಗಳು ನಿತ್ಯ ಸಮನ್ವಯ ಸಭೆ ನಡೆಸಿ ರೋಗ ಹರಡದಂತೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸಲಹೆ ನೀಡಿದ್ದಾರೆ. ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯೂ ತಡೆಗಟ್ಟಬೇಕು. ಏನು ಮಾಡಬೇಕು, ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಗ್ಯೂ ಹರಡದಂತೆ ನೋಡಿಕೊಳ್ಳಿ ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು ಎಂದು ಸೂಚನೆ ನೀಡಿದರು.