ಕರ್ನಾಟಕ

karnataka

ETV Bharat / state

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ - KPSC Exams - KPSC EXAMS

ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕು ಹಾಗೂ 371ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಪ್ರಗತಿ ಪರಿಶೀಲನೆ ನಡೆಸಿದರು.

CM Siddaramaiah Instructs To Conduct KPSC Exam On UPSC Pattern
ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ (ETV Bharat)

By ETV Bharat Karnataka Team

Published : Sep 25, 2024, 4:08 PM IST

ಬೆಂಗಳೂರು : ಕೆಪಿಎಸ್​ಸಿ (ಕರ್ನಾಟಕ ಲೋಕ ಸೇವಾ ಆಯೋಗ)ದಲ್ಲಿಯೂ ಯುಪಿಎಸ್‌ಸಿ ಮಾದರಿ ಹಾಗೂ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.

ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ (ETV Bharat)

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.

ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ (ETV Bharat)

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲ್ಯಾಷ್‌ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.

ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ (ETV Bharat)

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.

ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ (ETV Bharat)

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹ ಎಚ್ಚರಿಕೆ ನೀಡಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಿದರು‌.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಸಿಎಂ ಇದೇ ವೇಳೆ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ, ಈಶ್ವರ್‌ ಖಂಡ್ರೆ, ಕೆ. ಸುಧಾಕರ್‌, ಡಾ. ಎಂ.ಸಿ. ಸುಧಾಕರ್‌, ಎನ್.ಎಸ್. ಬೋಸರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:945 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ - Agricultural Officers job

ABOUT THE AUTHOR

...view details