ಬೆಂಗಳೂರು:ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ - ಕನ್ನಡಿಗ - ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರ ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ. ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆಯೇ ವಿನಹ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ. ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು.
ಹಿಂದಿ ಹೇರಿಕೆ, ಜಲ ವಿವಾದ: ಆದರೆ, ಕಳೆದ ಹತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆ ಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರದ ಅನ್ಯಾಯ:ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸ್ ಬರುತ್ತಿದೆ.