ದೆಹಲಿ/ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು.
ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಅಭಿನಂದಿಸಿದರು.
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅಭಿನಂಧಿಸಿದ್ದಾರೆ.
ಸಿಎಂ ಜೊತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ಆಗಮಿಸಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಅವರು ಪಾಲ್ಗೊಳ್ಳುವುದಲ್ಲದೆ, ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಇದನ್ನೂ ಓದಿ:ಸದ್ಯಕ್ಕೆ ಸಂಪುಟ ಪುನಾರಚನೆ ಪ್ರಸ್ತಾವನೆ ಇಲ್ಲ: ಸಿಎಂ ಸಿದ್ದರಾಮಯ್ಯ