ಮೈಸೂರು:ಸೌಲಭ್ಯ ವಂಚಿತರನ್ನು ಗುರುತಿಸಲೆಂದೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೆ ಹಲವು ಕಾರಣಗಳಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ದೇಶದಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ 1930ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ಹಿಂದುಳಿದವರು, ದಲಿತ - ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದ್ದೇಶವಾಗಿತ್ತು. ಅವಕಾಶಗಳಿಂದ ವಂಚಿತ ಆಗಿರುವುದರಿಂದಲೇ ಈ ಅಸಮಾನತೆ ಸೃಷ್ಟಿಯಾಗಿದೆ. ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಡಲು ಅವರು ಪ್ರಯತ್ನಿಸಿದರು. ಸಾಮಾಜಿಕ ಜವಾಬ್ದಾರಿಯನ್ನು ಈ ತಲೆಮಾರಿನಲ್ಲಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಪೀಠಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ರಾಜ್ಯಾದ್ಯಂತ ನಾವು ಮಾಡಿದ್ದೇವೆ ಎಂದು ಹೇಳಿದರು.
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಸಮಾಜದಲ್ಲಿ ಜಾತಿ ಶ್ರೇಣಿಯನ್ನು ಮುಂದುವರೆಸಲು ಪ್ರಯತ್ನಿಸುತ್ತಿದ್ದಾರೆ. ಅವರು ಈ ಸಮಾಜದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಮುಂದೆ ಬರುವುದನ್ನು ಇಚ್ಛೆ ಪಡುವುದಿಲ್ಲ. ಈ ಹಿನ್ನೆಲೆಯಲ್ಲಿ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ನೀಡಲು ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಈಗ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಜಾತಿಯ ದುರ್ಬಲ ವರ್ಗಕ್ಕೆ ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡಲಾಗಿದೆ ಸಿಎಂ ಸಮರ್ಥಿಸಿಕೊಂಡರು.