ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೇ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ, ಈ ಬಜೆಟ್ ಜನವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದು ಕಿಡಿಕಾರಿದರು.
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಮುಂದುವರೆಸಿತ್ತು. ಆದರೆ, ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮ್ ಅವರು ಘೋಷಿಸಿದ್ದರು. ಆದರೆ, ಈ ಯೋಜನೆಗೆ ನಯಾ ಪೈಸೆಯನ್ನೂ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ ಎಂದು ಹೇಳಿದರು.
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದು ಕಿಡಿಕಾರಿದರು.
ಆಗಸ್ಟ್ 28 ರಂದು ರಾಜ್ಯಕ್ಕೆ 16ನೇ ಹಣಕಾಸು ಆಯೋಗ ಭೇಟಿ: ಕೇಂದ್ರದ 16ನೇ ಹಣಕಾಸು ಆಯೋಗವು ಆಗಸ್ಟ್ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದರು.