ಕರ್ನಾಟಕ

karnataka

ETV Bharat / state

ಬರ ಪರಿಹಾರ ಪ್ರಧಾನಿ ಮೋದಿ ಸಾಧನೆ ಎನ್ನುತ್ತಿರುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ - Drought Relief

ಬರ ಪರಿಹಾರ ಬಿಡುಗಡೆಯು ಸುಪ್ರೀಂ ಕೋರ್ಟ್ ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಇಟ್ಟುಕೊಂಡಿರುವ ಕಾಳಜಿಯ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Siddaramaiah
ಸಿದ್ದರಾಮಯ್ಯ

By ETV Bharat Karnataka Team

Published : Apr 27, 2024, 4:22 PM IST

ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​​ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬುದು ಮನವರಿಕೆಯಾಗಿದೆ. ನ್ಯಾಯಾಲಯವು ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ನರೇಂದ್ರ ಮೋದಿ ಸರ್ಕಾರ ಕೋರ್ಟ್​​ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ಎನ್​ಡಿಆರ್​​ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂ. ನೀಡಬೇಕಾಗಿದ್ದರೂ, ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ನಾವು 13-9-2023ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್​​ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು. ಅಂದರೆ, 18,171 ಕೋಟಿ ರೂ. ಆಗಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೇ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು 3,454 ಕೋಟಿ ರೂ. ಮಾತ್ರ ಎಂದಿದ್ದಾರೆ.

ಬರಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂ ಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ರಾಜ್ಯಕ್ಕೆ ಬಿಡುಗಡೆಯಾಗಿರುವ ಬರಪರಿಹಾರ ನಮ್ಮ ಮತ್ತು ನಾಡಿನ ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದು ಸಿಎಂ ತಿಳಿಸಿದ್ದಾರೆ.

ಸುಮಾರು 7 ತಿಂಗಳ ಕಾಲ ಬರ ಪರಿಹಾರಕ್ಕಾಗಿ ಕಾದು ಕಾದು ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶವನ್ನು ಸೃಷ್ಟಿಸಿದ್ದು ಕೇಂದ್ರ ಸರ್ಕಾರವೇ. ಕರ್ನಾಟಕದ ರೈತರ ಸಂಕಷ್ಟವನ್ನು, ಕೇಂದ್ರದ ರಾಜಕೀಯ ದುರುದ್ದೇಶವನ್ನು ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟ ನಂತರ ಮೋದಿ ಸರ್ಕಾರಕ್ಕೆ ಕೋರ್ಟ್ ಚಾಟಿ ಬೀಸಿತ್ತು. ಇದರಿಂದ ಬೇರೆ ದಾರಿಯಿಲ್ಲದೆ ಒಂದು ವಾರದ ಗಡುವು ಪಡೆದು ಕೇಂದ್ರ ಈಗ 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈಗ ಬಿಡುಗಡೆ ಆಗಿರುವ ಹಣ ನಾವು ಕೇಳಿದ ಪರಿಹಾರದಲ್ಲಿ ನಾಲ್ಕನೇ ಒಂದು ಭಾಗಕ್ಕೂ ಕಡಿಮೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್​ಗೆ ಧನ್ಯವಾದ:ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ. ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್​ಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ನಾಡಿನ ರೈತರ ಆಕ್ರೋಶ, ನಮ್ಮ ಹೋರಾಟ ಮತ್ತು ನಾಡಿನ ರೈತರ ಮೇಲೆ ಸುಪ್ರೀಂ ಕೋರ್ಟ್‌ಗೆ ಇರುವ ಕಾಳಜಿಯ ಫಲವಾಗಿ ಬಿಡುಗಡೆಯಾದ ಈ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಎಂದು ಬಿಂಬಿಸುತ್ತಿರುವ ರಾಜ್ಯ ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು. ನರೇಂದ್ರ ಮೋದಿ ಅವರಿಗೆ ನಿಜವಾಗಿ ಕರ್ನಾಟಕದ ಬಗ್ಗೆ ಕಾಳಜಿಯಿದ್ದರೆ, ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಲಿ. 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ವಿಶೇಷ ಅನುದಾನ, ಕೆರೆಗಳ ಸಂರಕ್ಷಣೆ ಮತ್ತು ಪೆರಿಫರಲ್ ರಿಂಗ್ ರೋಡ್​​ಗೆ ಶಿಫಾರಸ್ಸಾದ ಅನುದಾನ, ಭದ್ರಾ ಮೇಲ್ದಂಡೆಗೆ ಬಜೆಟ್‌ನಲ್ಲಿ ಘೋಷಿಸಿದ ಅನುದಾನ ನೀಡಲಿ ಎಂದು ಸಿಎಂ ಆಗ್ರಹಿಸಿದ್ದಾರೆ.

ಇದೇ ವೇಳೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆಂಬ ಬಿಜೆಪಿ ಪೋಸ್ಟ್​ಗೆ ತಿರುಗೇಟು ನೀಡಿರುವ ಸಿಎಂ, ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಏನು ಮಾಡಿದೆ, ಕೇಂದ್ರ ಸರ್ಕಾರ ಹೇಗೆ ಸ್ಪಂದಿಸಿದೆ ಎಂಬ ಬಗ್ಗೆ ದಿನಾಂಕಗಳ ಸಮೇತ ವಿವರ ನೀಡಿದ್ದಾರೆ.

ಇದನ್ನೂ ಓದಿ:ಕೇಂದ್ರದಿಂದ ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಒಲಿದ ಜಯ - Drought Relief fund to Karnataka

ABOUT THE AUTHOR

...view details