ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಮತ್ತೆ ಜನಾರ್ದನರೆಡ್ಡಿ ಪಟಾಲಂ ಬೆಳೆಯಲು ಬಿಡಬೇಡಿ: ಸಿಎಂ ಸಿದ್ದರಾಮಯ್ಯ

ಜನಾರ್ದನ ರೆಡ್ಡಿ ಪಟಾಲಂ ಬೆಳೆದರೆ ಮತ್ತೆ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : 6 hours ago

ಬಳ್ಳಾರಿ: "ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಜನಾರ್ದನರೆಡ್ಡಿ ಪಟಾಲಂ ಬೆಳೆಯಲು ಬಿಡಬೇಡಿ" ಎಂದು ಸಿಎಂ ಸಿದ್ದರಾಮಯ್ಯ ‌ಮತದಾರರಿಗೆ ಕರೆ ನೀಡಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

"ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೇ ಅವಮಾನ ಮಾಡಿದ್ದರು. ದೇವಸ್ಥಾನದ ಬಾಗಿಲಲ್ಲಿ ಒಬ್ಬನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ದರು. ಅಷ್ಟೊಂದು ರೆಡ್ಡಿ ದರ್ಬಾರ್ ಇತ್ತು.‌‌ ಅಕ್ರಮ ಗಣಿಗಾರಿಕೆಯಿಂದ ರೆಡ್ಡಿ ಬ್ರದರ್ಸ್ ಬಳ್ಳಾರಿ ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್" ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ:"ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್‌ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು. ಏನಾದರೂ ಜನಾರ್ದನ ರೆಡ್ಡಿ ಪಟಾಲಂ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ" ಎಂದು ಕರೆ ನೀಡಿದರು.

"ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್‌ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ನಡೆದಿರುವುದು. ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371ಜೆ ಜಾರಿ ಮಾಡಿದ್ದು ಕಾಂಗ್ರೆಸ್. ನಮ್ಮ ಅಂದಿನ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಮತ್ತು ನಾನು 371ಜೆ ಜಾರಿ ಮಾಡಲು ಕಾರಣ" ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 5ಸಾವಿರ ಕೋಟಿ ಅನುದಾನ:"ನಾನು ಮುಖ್ಯಮಂತ್ರಿಯಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5,000 ಕೋಟಿ ಅನುದಾನ ನೀಡಿದೆ. 371ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಇಂಜಿನಿಯರ್​, ಡಾಕ್ಟರ್​ಗಳಾದರು. ಸಾವಿರಾರು ಸಂಖ್ಯೆಯಲ್ಲಿ ಸರ್ಕಾರಿ ಕೆಲಸಕ್ಕೆ ಸೇರಲು ಅವಕಾಶವಾಯಿತು. ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ?. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ? ಎಂದು ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ" ಎಂದರು.

"ನಾವಿನ್ನೂ ಮೂರುವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸುತ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ. ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ವೋಟು ನನಗೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ" ಎಂದು ಹೇಳಿದರು.

ಇದನ್ನೂ ಓದಿ:ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ತೆಯ ಕರೆತಂದು ಸ್ಥಳ ಮಹಜರು ನಡೆಸಿದ SIT

ABOUT THE AUTHOR

...view details