ಕರ್ನಾಟಕ

karnataka

ETV Bharat / state

ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ : ಸಿಎಂ ಸಿದ್ದರಾಮಯ್ಯ - CM Siddaramaiah

ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ಮಾತನಾಡಿದ್ದಾರೆ. ಸೆಕ್ಷನ್ 218 ರಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Sep 24, 2024, 3:10 PM IST

Updated : Sep 24, 2024, 5:37 PM IST

ಬೆಂಗಳೂರು :ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದರು.

ಸಿಎಂ ಸಿದ್ದರಾಮಯ್ಯ (ETV Bharat)

ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು:ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್​ಎಸ್​ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್​ಎಸ್​ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ ಎಂದಿದ್ದಾರೆ.

ರಾಜ್ಯದ ಜನ ನನ್ನ ಹಿಂದೆ ಇದ್ದಾರೆ- ಸಿಎಂ:ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ ಎಂದು ಹೇಳಿದ್ದಾರೆ.

ಕೋರ್ಟ್​ನಲ್ಲಿ ಹೋರಾಟ ಮುಂದುವರೆಯಲಿದೆ;ಬಿಜೆಪಿ, ಜೆಡಿಎಸ್​ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದ ಉದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬಡವರು, ಶೋಷಿತರ ಒರವಾಗಿ ಜಾರಿಗೆ ತಂದೆ ಯೋಜನೆಗೆ ವಿರೋಧಿಸುವವರೇ ನನ್ನ ವಿರೋಧಿಗಳು:ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್​ಸಿ ಎಸ್​ಪಿ/ಟಿಎಸ್​ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು ಎಂದು ಹೇಳಿದ್ದಾರೆ.

ಸಂಪೂರ್ಣ ಬಹುಮತ ನೀಡಿದ್ದರಿಂದಲೇ ಇಷ್ಟು ವಿರೋಧ:ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಮಣಿಸುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಮುಡಾ ಹಗರಣ: ರಾಜ್ಯಪಾಲರ ಕ್ರಮ ಎತ್ತಿಹಿಡಿದ ಹೈಕೋರ್ಟ್, ಸಿಎಂಗೆ ಹಿನ್ನಡೆ - MUDA SCAM

Last Updated : Sep 24, 2024, 5:37 PM IST

ABOUT THE AUTHOR

...view details