ಬೆಂಗಳೂರು: "ವಕ್ಪ್ ಆಸ್ತಿ ವಿಚಾರದಲ್ಲಿ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು. ಅದಕ್ಕೆ ಸಿದ್ಧರಾಗಿರಿ" ಎಂದು ಸಿಎಂ ಸಿದ್ದರಾಮಯ್ಯ ಅವರು ಬಿ.ವೈ. ವಿಜಯೇಂದ್ರಗೆ ಟಾಂಗ್ ನೀಡಿದ್ದಾರೆ.
ಈ ಸಂಬಂಧ ಸಿಎಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. "ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ" ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
"ನಿಮ್ಮ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ. ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ. ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್. ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?" ಎಂದು ಪ್ರಶ್ನಿಸಿದ್ದಾರೆ.
"ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ. ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ - ಅನುದಾನ - ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ತಂದೆಯವರಾದ ಬಿ.ಎಸ್. ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ" ಎಂದಿದ್ದಾರೆ.