ಬೆಂಗಳೂರು:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಉಪಟಳ ಸಂಬಂಧ ಚರ್ಚೆ ನಡೆಸಲು ಗೃಹ ಕಚೇರಿ ಕೃಷ್ಣಾದಲ್ಲಿ ಜ.25ಕ್ಕೆ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ವಿರುದ್ಧ ರೈತರು ಸೇರಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ ಚರ್ಚಿಸಲು ಸಭೆ ಕರೆದಿದ್ದಾರೆ.
ಸಭೆಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕರೆಯಲಾಗಿದೆ. ಉಳಿದಂತೆ ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಪೊಲೀಸ್ ಮಹಾನಿರ್ದೇಶಕರು, ಆರ್ಥಿಕ ಇಲಾಖೆ, ಸಹಕಾರ ಇಲಾಖೆ, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿ ವಿವಿಧ ಅಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ. ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ವಿರುದ್ಧ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.