ಬೆಳಗಾವಿ:ಜಾರಕಿಹೊಳಿ ಬ್ರದರ್ಸ್ ಭದ್ರಕೋಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ. ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಗೋಕಾಕ್ಗೆ ಆಗಮಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಮುಡಾ ಹಗರಣದ ತನಿಖೆ ಸಂಬಂಧ ಇದೇ 29ರಂದು ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ವಿಪಕ್ಷಗಳು ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇಂತಹ ಒತ್ತಡದಲ್ಲಿದ್ದರೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಆಗಸ್ಟ್ 5ರಂದು ನೆರೆ ವೀಕ್ಷಿಸಲು ಗೋಕಾಕ್ ತಾಲೂಕಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ನಾಳೆ ಗೋಕಾಕ್ ಹಾಗೂ ಮೂಡಲಗಿ ತಾಲೂಕುಗಳಲ್ಲಿ ನಾಲ್ಕು ಕಡೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.45ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ, ರಸ್ತೆ ಮಾರ್ಗವಾಗಿ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಕೌಜಲಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಬಳಿಕ ಕುರುಬ ಸಂಘದ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಫಾರ್ಮ್ ಹೌಸ್ಗೆ ತೆರಳಲಿದ್ದಾರೆ.