ಬೆಂಗಳೂರು:''ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡುವ ಮೂಲಕ ಕೇಂದ್ರವು ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ''ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾವಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು'' ಎಂದಿದ್ದಾರೆ.
''ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
''ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿವೆ. ಇಲ್ಲಿಯವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ'' ಎಂದು ಹೇಳಿದ್ದಾರೆ.