ಬೆಂಗಳೂರು :ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಅಷ್ಟೊಂದು ಹೆಚ್ಚಿನ ಗ್ರೇಸ್ ಮಾರ್ಕ್ ನೀಡುವ ಅಗತ್ಯ ಇತ್ತಾ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಅಧಿಕಾರಿಗಳ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧದ ಬಗ್ಗೆ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆಯಿಂದಲೂ ಗ್ರೇಸ್ ಮಾರ್ಕ್ಸ್ಗೆ ಸಾಕಷ್ಟು ವಿರೋಧ ಬರ್ತಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ವೇಳೆ ಸಿಎಂ ಮಧ್ಯಪ್ರವೇಶ ಮಾಡಿ, ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಎಸ್‌ಎಸ್‌ಎಲ್‌ಸಿಯಲ್ಲಿ ಗ್ರೇಸ್ ಮಾರ್ಕ್ಸ್ ಕೊಡೋದು ಅಗತ್ಯ ಇತ್ತಾ? ಎಂದು ಪ್ರಶ್ನೆ ಮಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡುವಂತೆ ಸೂಚಿಸಿದರು.
ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡಬೇಡಿ:ಪರೀಕ್ಷೆಯಲ್ಲಿ ಈ ಬಾರಿ ಕಠಿಣ ಕ್ರಮ ಕೈಗೊಳ್ಳಲಾಗಿತ್ತು. ಅದು ಸರಿ ಇದೆ. ಆದರೆ, ಈ ಬಾರಿ ಶೇ 20 ರಷ್ಟು ಕೃಪಾಂಕ ಕೊಟ್ಟಿದ್ದು ಸರಿ ಇತ್ತಾ? ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಶ್ನಿಸಿದರು. ಕಾಫಿ ಹೊಡೆಯುವುದನ್ನು ತಪ್ಪಿಸಲು ಈ ಬಾರಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹಾಗಂತ ಅವರಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟಿರುವುದು ಸರಿಯಲ್ಲ. ಕಾಪಿ ಮಾಡುವುದನ್ನು ತಡೆದು ಅದನ್ನು ಗ್ರೇಸ್ ಮಾರ್ಕ್ಸ್ ಮೂಲಕ ನೀಡದಂತಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮುಂದಿನ ಬಾರಿ ಮರುಪರಿಶೀಲಿಸುವಂತೆ ಸಿಎಂ ಸೂಚಿಸಿದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ ಏಕೆ ಆಯಿತು ಅಂತ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕೇಳಿದರು. ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಎಂದು ಇದೇ ವೇಳೆ ಸಿಎಂ ಸೂಚಿಸಿದರು.