ಕರ್ನಾಟಕ

karnataka

ETV Bharat / state

ಅಂದಾಜಿನ ಪ್ರಕಾರ ಕೋವಿಡ್ ವೇಳೆ ₹ 10 - 15 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ನಡೆದಿದೆ: ಸಿಎಂ ಸಿದ್ದರಾಮಯ್ಯ - CM SIDDARAMAIH

ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ವೇಳೆ ನಡೆದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಅಂದಾಜಿನ ಪ್ರಕಾರ ಕೋವಿಡ್​ ವೇಳೆ ₹ 10 ರಿಂದ 15 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

cm-siddaramaih
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Nov 9, 2024, 10:21 PM IST

ಬೆಂಗಳೂರು: ಒಂದು ಅಂದಾಜಿನ ಪ್ರಕಾರ ಕೋವಿಡ್ ವೇಳೆ ಹತ್ತರಿಂದ ಹದಿನೈದು ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೊರೊನಾ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದೆ ಎಂದಿದ್ದಾರೆ.

ನ್ಯಾಯಮೂರ್ತಿ ಡಿಕುನ್ಹಾ ಸಮಿತಿ ಕಳೆದ ಆಗಸ್ಟ್ ತಿಂಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸುಮಾರು 1700ಕ್ಕೂ ಹೆಚ್ಚು ಪುಟಗಳ ತನಿಖಾ ವರದಿಯನ್ನು ಸಂಪುಟ ಉಪಸಮಿತಿ ಅಧ್ಯಯನ ನಡೆಸುತ್ತಿದೆ. ಅದು ನೀಡುವ ವರದಿಯನ್ನು ಸರ್ಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದು ನಾವೇ ಬಯಲುಗೊಳಿಸಿರುವ ಹಗರಣ. ಕೊರೊನಾ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ಧಾವಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಿಸಬೇಕಾದ ಹೊಣೆ ಸರ್ಕಾರದ್ದಾಗಿತ್ತು. ಆದರೆ, ಜನ ಸರಿಯಾಗಿ ಚಿಕಿತ್ಸೆ ಇಲ್ಲದೇ ಸಾಯುತ್ತಿದ್ದ ಸಂದರ್ಭವನ್ನೂ ಬಳಸಿಕೊಂಡು ದುಡ್ಡು ನುಂಗಲು ಯತ್ನಿಸಿದ್ದನ್ನು ಇಡೀ ಕರ್ನಾಟಕ ಕಂಡಿದೆ ಎಂದು ತಿಳಿಸಿದ್ದಾರೆ.

ಭ್ರಷ್ಟಾಚಾರದ ದಂಧೆಯನ್ನು ಮುಂದುವರಿಸಿಕೊಂಡು ಹೋಗಿತ್ತು : ಕೊರೊನಾ ಕಾಲದಲ್ಲಿ ಬೆಡ್, ಪಿಪಿಇ, ವೆಂಟಿಲೇಟರ್, ಆಕ್ಸಿಜನ್ ಸಿಲಿಂಡರ್​ನಿಂದ ಹಿಡಿದು ಸ್ಯಾನಿಟೈಸರ್ ಮತ್ತು ಮಾಸ್ಕ್ ವರೆಗೆ ಪ್ರತಿಯೊಂದು ಸಾಮಗ್ರಿ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಆ ಕಾಲದಲ್ಲಿ ನಾವು ಬಯಲಿಗೆಳೆದಿದ್ದೆವು. ಈ ಬಗ್ಗೆ ನಾನು ಸದನದ ಒಳಗೆ ಮತ್ತು ಹೊರಗೆ ಮಾತನಾಡಿದ್ದೆ. ಆದರೆ ಸರ್ಕಾರ ಅವುಗಳನ್ನೆಲ್ಲ ನಿರಾಕರಿಸುತ್ತಲೇ ತನ್ನ ಭ್ರಷ್ಟಾಚಾರದ ದಂಧೆಯನ್ನು ಮುಂದುವರಿಸಿಕೊಂಡು ಹೋಗಿತ್ತು ಎಂದಿದ್ದಾರೆ.

ನಮ್ಮ ದೇಶದಲ್ಲಿರುವ ಕಂಪನಿಗಳು ಪಿಪಿಇ ಕಿಟ್​ಗಳನ್ನು 200 ರಿಂದ 300 ರೂಪಾಯಿ ದರದಲ್ಲಿ ಮಾರಾಟ ಮಾಡಲು ಸಿದ್ಧ ಇರುವಾಗ ಬಿ. ಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಸೇರಿಕೊಂಡು ಚೀನಾದ ಕಂಪನಿಯಿಂದ ರೂ. 2,000ಕ್ಕೆ ಒಂದರಂತೆ ಪಿಪಿಇ ಕಿಟ್​ಗಳನ್ನು ಖರೀದಿ ಮಾಡಿರುವುದನ್ನು ದಾಖಲೆ ಸಹಿತ ಕೊರೊನಾ ಕಾಲದಲ್ಲಿಯೇ ನಾವು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ತನಿಖಾ ಸಮಿತಿ ನೀಡಿರುವ ವರದಿಯನ್ನು ನಾನಿನ್ನೂ ಪೂರ್ತಿ ಓದಿಲ್ಲ. ನನ್ನ ಪ್ರಕಾರ ಮಾಧ್ಯಮಗಳಲ್ಲಿ ವರದಿಯಾಗಿರುವುದು ಒಂದು ‘‘ಮಂಜುಗಡ್ಡೆಯ ಒಂದು ಸಣ್ಣ ತುದಿ’’ ಮಾತ್ರ. ಒಂದು ಅಂದಾಜಿನ ಪ್ರಕಾರ, ಹತ್ತರಿಂದ ಹದಿನೈದು ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ತನಿಖಾ ಸಮಿತಿ ಆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರಬಹುದು ಎಂದು ವಿವರಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರವೇ ನೇರ ಹೊಣೆ :ಕೊರೊನಾ ವೈರಸ್​ನಿಂದಾಗಿ ಸಂಭವಿಸಿದ ಸಾವಿನ ಬಗ್ಗೆ ಆಗಿನ ಸರ್ಕಾರ ಕೊಟ್ಟಿರುವ ಸಾವಿನ ಸಂಖ್ಯೆ ಏನೇ ಇರಬಹುದು. ನಮ್ಮ ಪ್ರಕಾರ ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಯುವಜನರು 50,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾವಿಗೀಡಾಗಿದ್ದಾರೆ. ರಾಜ್ಯ ಸರ್ಕಾರ ಸಕಾಲದಲ್ಲಿ ಚಿಕಿತ್ಸೆ, ಔಷಧಿ ಮತ್ತು ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿದ್ದರೆ ಇಷ್ಟೊಂದು ಸಾವು ಖಂಡಿತ ಸಂಭವಿಸುತ್ತಿರಲಿಲ್ಲ. ಜನ ಕೊರೊನಾ ವೈರಸ್​ಗಿಂತ ಹೆಚ್ಚಾಗಿ ಬಿಜೆಪಿಯ ಭ್ರಷ್ಟಾಚಾರದ ವೈರಸ್​ನಿಂದ ಸತ್ತಿದ್ದಾರೆ. ಈ ಸಾವಿಗೆ 2019 ರಿಂದ 2023ರವರೆಗೆ ರಾಜ್ಯದಲ್ಲಿ ಇದ್ದ ಬಿಜೆಪಿ ನೇತೃತ್ವದ ಸರ್ಕಾರವೇ ನೇರ ಹೊಣೆ ಎನ್ನುವುದರಲ್ಲಿ ಸಂಶಯವೇ ಇಲ್ಲ ಎಂದಿದ್ದಾರೆ.

ಸಾವನ್ನು ಸಂಭ್ರಮಿಸುವ, ಹೆಣ ಬಿದ್ದಲ್ಲಿ ಓಡಿ ರಾಜಕೀಯದ ಬೇಳೆ ಬೇಯಿಸುವ ಬಿಜೆಪಿ ಮತ್ತು ಅದರ ನೇತೃತ್ವದ ಆಗಿನ ಸರ್ಕಾರ ಕೊರೊನಾ ಕಾಲದಲ್ಲಿಯೂ ಇದೇ ಕೆಲಸ ಮಾಡಿದೆ. ಜನ ಬೆಡ್, ವೆಂಟಿಲೇಟರ್, ಔಷಧ, ಪಿಪಿಇ ಕಿಟ್, ವ್ಯಾಕ್ಸಿನ್, ಮಾಸ್ಕ್, ಸ್ಯಾನಿಟೈಸರ್ ಇಲ್ಲದೆ ಸಾಯುತ್ತಿರುವಾಗ ಬಿಜೆಪಿಯವರು ಈ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ದುಡ್ಡು ಹೇಗೆ ಬಾಚಬಹುದು ಎನ್ನುವ ಲೆಕ್ಕದಲ್ಲಿ ತೊಡಗಿದ್ದು, ಅತ್ಯಂತ ಅಮಾನವೀಯ ನಡವಳಿಕೆಯಾಗಿದೆ.

ಈ ಯಡಿಯೂರಪ್ಪ ಮಗ ವಿಜಯೇಂದ್ರ ತಾನೊಬ್ಬ ಮಹಾ ಸತ್ಯ ಹರಿಶ್ಚಂದ್ರನ ಮಗನಂತೆ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೂ ಆಡಳಿತದ ಸೂತ್ರ ವಿಜಯೇಂದ್ರನ ಕೈಯಲ್ಲಿಯೇ ಇತ್ತು. ಮುಖ್ಯಮಂತ್ರಿ ಸಹಿಯನ್ನು ತಾನೇ ಹಾಕುತ್ತಿದ್ದ ಎಂದು ಅವರ ಪಕ್ಷದ ನಾಯಕರೇ ಆರೋಪ ಮಾಡಿದ್ದಾರೆ. ಆದ್ದರಿಂದ ಕೊರೊನಾ ಭ್ರಷ್ಟಾಚಾರದಲ್ಲಿ ಅವರ ಪಾಲೂ ಇದೆ ಎಂದಿದ್ದಾರೆ.

ಇನ್ನೊಬ್ಬ ಆರೋಪಿ ಶ್ರೀರಾಮುಲು ರಾಜಕೀಯ ಹುಟ್ಟು ಪಡೆದಿರುವುದೇ ಬಳ್ಳಾರಿಯ ಗಣಿ ಲೂಟಿಯ ಕೆಸರಲ್ಲಿ. ಇವರು ರಿಪಬ್ಲಿಕ್ ಆಫ್ ಬಳ್ಳಾರಿಯ ಗ್ಯಾಂಗ್ ಲೀಡರ್ ಜನಾರ್ದನ ರೆಡ್ಡಿಯ ಶಿಷ್ಯಬಳಗಕ್ಕೆ ಸೇರಿದವರು. ಇವರಿಗೆ ರಾಜಕೀಯ ಎಂದರೆ ದುಡ್ಡು ನುಂಗುವುದಾಗಿದೆ. ಅದು ಕಬ್ಬಿಣದ ಅದಿರಾಗಬಹುದು, ಇಲ್ಲವೇ ಕೊರೊನಾ ರೋಗಿಗಳನ್ನು ಉಳಿಸುವ ಪಿಪಿಇ ಕಿಟ್ ಆಗಿರಬಹುದು. ಅವರಿಗೆ ಜನರ ಪ್ರಾಣ, ಆರೋಗ್ಯ ಮುಖ್ಯ ಅಲ್ಲ, ಹಣ ಬಂದು ಜೇಬಿಗೆ ಬಿದ್ದರೆ ಸಾಕು. ಇಂತಹವರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಕೇಳುತ್ತಾ ಅಡ್ಡಾಡುತ್ತಿರುವುದು ನಾಚಿಕೆಗೇಡಿನ ಕೆಲಸವಾಗಿದೆ ಎಂದು ಟೀಕಿಸಿದ್ದಾರೆ.

ಜನರು ಕೂಡಾ ಇವರ ಸಭೆಗಳನ್ನು ಬಹಿಷ್ಕರಿಸಬೇಕು : ಡಿಕುನ್ಹಾ ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ಕಾನೂನಿನ ಪ್ರಕ್ರಿಯೆ ಅವಸರದಲ್ಲಿ ನಡೆಯುವಂತಹದ್ದಲ್ಲ. ಅದು ಪೂರ್ಣಗೊಳ್ಳುವವರೆಗೆ ಕೊರೊನಾ ಸಾವಿಗೆ ನೇರ ಹೊಣೆಗಾರರಾಗಿರುವ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಹಾಗೂ ಶ್ರೀರಾಮುಲು ಇವರೆಲ್ಲ ತಮ್ಮ ಚುನಾವಣಾ ಪ್ರಚಾರವನ್ನು ತಕ್ಷಣ ನಿಲ್ಲಿಸಿ, ಮನೆಗೆ ಹೋಗಬೇಕು. ಮಾನ ಮರ್ಯಾದೆ ಇದ್ದರೆ ತಮ್ಮ ಭ್ರಷ್ಟ ಮುಖವನ್ನು ಹೊತ್ತುಕೊಂಡು ಜನರ ಬಳಿ ಮತಕೇಳಲು ಹೋಗಬಾರದು. ಜನರು ಕೂಡಾ ಇವರ ಸಭೆಗಳನ್ನು ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಕೋವಿಡ್ ಹಗರಣ: ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಬಗ್ಗೆ ತೀರ್ಮಾನ - ಸಿಎಂ

ABOUT THE AUTHOR

...view details