ಬೆಂಗಳೂರು:ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಜೆಡಿಎಸ್‍ನ ಹೆಚ್.ಡಿ.ರೇವಣ್ಣ ಸೇರಿದಂತೆ ಬಹುತೇಕ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಚಾರಕ್ಕೆ ಉತ್ತರಿಸಿದ ಸಚಿವರು, ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ. ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ, ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಬೇರೆ ಜಿಲ್ಲೆಯಿಂದ 3,500 ರೈತರನ್ನು ಹಾಸನದಲ್ಲಿ ನೋಂದಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆ ಒಳಪಡಿಸಲಾಗುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಮೊದಲು ಕೇಂದ್ರ ಸರ್ಕಾರ 7 ತಿಂಗಳವರೆಗೆ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.