ಬೆಂಗಳೂರು:ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಅಧಿಕೃತ ಇನ್‌ಸ್ಟಾಗ್ರಾಮ್ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅವಮಾನಕರ ಹಾಗೂ ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಕಲಬುರಗಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾರವಾಳ ಗ್ರಾಮದ ಪ್ರವೀಣ್ ಕುಮಾರ್ ಪಾಟೀಲ್ ಕಲಬುರಗಿಯ ಸೈಬರ್ ಅಪರಾಧ ಠಾಣೆ (ಸೆನ್)ಯಲ್ಲಿ ದಾಖಲಿಸಿರುವ ದೂರು ಹಾಗೂ ಅದರ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೂರಿನಲ್ಲಿ ಐಪಿಸಿ ಸೆಕ್ಷನ್ 152 (ಎ) ಅಡಿ ಆರೋಪಿಸಲಾಗಿದೆ. ಆದರೆ, ಅದಕ್ಕೆ ಪೂರಕ ಪುರಾವೆಗಳಿಲ್ಲ. ದೆಹಲಿಯಲ್ಲಿ ಟ್ವೀಟ್ ಮಾಡಿರುವುದಕ್ಕೂ ಕಲಬುರಗಿಗೂ ಏನು ಸಂಬಂಧ? ಅರ್ಜಿದಾರರ ವಿರುದ್ಧದ ಇಂತಹದ್ದೇ ಬೇರೊಂದು ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿದೆ. ಈ ಹಂತದಲ್ಲಿ ಈ ಪ್ರಕರಣಕ್ಕೆ ಸಂಪೂರ್ಣ ತಡೆ ನೀಡಬೇಕು ಎಂದು ಕೋರಿದ್ದರು.