ಕರ್ನಾಟಕ

karnataka

ETV Bharat / state

ರಾಜ್ಯಪಾಲರಿಂದ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಆ.19ಕ್ಕೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ - Congress protests across the state - CONGRESS PROTESTS ACROSS THE STATE

ರಾಜ್ಯಪಾಲರಿಂದ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಆ.19ಕ್ಕೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.

CONGRESS PROTEST  BENGALURU  PERMISSION OF CM PROSECUTION  CM SIDDARAMAIAH
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು (ETV Bharat)

By ETV Bharat Karnataka Team

Published : Aug 17, 2024, 5:44 PM IST

ಬೆಂಗಳೂರು:ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್​ ರಾಜ್ಯ ವ್ಯಾಪಿ ಆಗಸ್ಟ್​ 19 ರಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ಆ.19 ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಇ-ಮೈಲ್ ಮೂಲಕ (presidentofindia@rb.nic.in) ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು (Memorandum) ನೀಡಬೇಕು ಎಂದು ಸೂಚಿಸಲಾಗಿದೆ.

ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಪ್ರತಿಭಟನೆಯಲ್ಲಿ ಎಲ್ಲಾ ಸಂಬಂಧಪಟ್ಟ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು/ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು, ವಾರ್ಡ್, ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಇತರ ಎಲ್ಲ ಸ್ಥಳೀಯ ಮುಖಂಡರುಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ.

ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ:ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಮುಂದೆ ಇಂದು (ಶನಿವಾರ) ಪ್ರತಿಭಟನೆ ನಡೆಸಿದರು. ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ. ಆದರೆ, ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರಲು ಪ್ರಾಮಾಣಿಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಗಳಿಸಿರುವ ಸಿದ್ದರಾಮಯ್ಯನವರನ್ನ ಈ ಪ್ರಕರಣದಲ್ಲಿ ಸಿಲುಕಿಸಲು ರಾಜಭವನ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

''ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಯಾವುದೇ ಪ್ರಕರಣದಲ್ಲೂ ಹಾಗೂ ಹಗರಣದಲ್ಲಿ ಇಲ್ಲಿಯವರೆಗೂ ಭಾಗಿಯಾಗದೆ ಪ್ರಾಮಾಣಿಕವಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯನವರನ್ನು ಕಳಂಕಿತರನ್ನಾಗಿ ಮಾಡಲು ಕೇಂದ್ರ ಸರ್ಕಾರ ಬಿಜೆಪಿ ಪಕ್ಷ ನಡೆಸಿರುವ ಕುತಂತ್ರ ರಾಜ್ಯಪಾಲರ ಮೂಲಕ ಇಂದು ಬಹಿರಂಗವಾಗಿದೆ. ರಾಜ್ಯಪಾಲರು ಬಿಜೆಪಿಯ ಅನೇಕ ಹಿಂದಿನ ಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ ಹಾಗೂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ. ಉದ್ದೇಶಪೂರ್ವಕವಾಗಿ ಬಿಜೆಪಿ ಜನತಾದಳದ ನಾಯಕರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಒಂದು ಅಂಶದ ಕಾರ್ಯಕ್ರಮವನ್ನು ರಾಜ್ಯಪಾಲರು ಹಮ್ಮಿಕೊಂಡಿರುವುದು ಇಂದು ಜಗಜ್ಜಾಹಿರವಾಗಿದೆ'' ಎಂದು ದೂರಿದರು.

''ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರು ಕರ್ನಾಟಕದಲ್ಲಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ವಾಮ ಮಾರ್ಗದಲ್ಲಿ ನಡೆಸುತ್ತಿರುವ ಪ್ರಯತ್ನಕ್ಕೆ ರಾಜ್ಯದ ಜನ ತಕ್ಕ ಉತ್ತರವನ್ನು ನೀಡಲಿದ್ದಾರೆ. ರಾಜಪಾಲರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಬಗ್ಗೆ ಗಮನ ಹರಿಸಬೇಕಾಗಿತ್ತು. ಇದು ಕೇವಲ ಬಿಜೆಪಿಯ ಒತ್ತಾಸೆಯಿಂದ ತನಿಖೆಗೆ ಆದೇಶ ನೀಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಕ್ರಮ ಸಂವಿಧಾನಕ್ಕೆ ಎಸೆದ ಅಪಚಾರವಾಗಿದೆ'' ಎಂದು ದೂರಿದರು.

ರಾಜಭವನದ ಮುಂದೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜಭವನ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿಕಪ್ಪು ಪಟ್ಟಿ ಧರಿಸಿಕೊಂಡು ಬಂದು ರಾಜಭವನದ ಮುಂದೆ ಹೈಡ್ರಾಮಾ ನಡೆಸಿದರು. 8 ಕಾಂಗ್ರೆಸ್ ಬೆಂಬಲಿಗರು ಪ್ರತಿಭಟಿಸಿದರು. ಸಿದ್ದರಾಮಯ್ಯ ಬೆಂಬಲಿಗರು ಎನ್ನಲಾದ ಕುಶಾಲ್, ಹಾಗೂ ನವೀನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಅನುಮತಿ ಇಲ್ಲದ ಹಿನ್ನೆಲೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡರು.

ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಾದ್ಯಂತ ಕಾಂಗ್ರೆಸ್​, ಅಹಿಂದ ಸಂಘಟನೆಗಳ ಪ್ರತಿಭಟನೆ - CONGRESS PROTEST

ABOUT THE AUTHOR

...view details