ಬೆಂಗಳೂರು/ಬೆಳಗಾವಿ:ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಪಾಲರಾದ ಎಸ್.ಎಂ.ಕೃಷ್ಣ ನಿಧನಕ್ಕೆ ವಿಧಾನಸಭೆಯಲ್ಲಿ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳಗ್ಗೆ ಸದನ ಸೇರಿದಾಗ ಸ್ಪೀಕರ್ ಯು.ಟಿ.ಖಾದರ್ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು.
ಎಸ್.ಎಂ.ಕೃಷ್ಣ 1932ರ ಮೇ 1ರಂದು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಪದವಿ ಬಳಿಕ ನಂತರ ಟೆಕ್ಸಾಸ್‌ನಲ್ಲಿ ಎಂಸಿಎಲ್ ಪದವಿ, ವಾಷಿಂಗ್ಟನ್ ವಿವಿಯ ಲಾ ಸ್ಕೂಲ್‌ನಿಂದಲೂ ಪದವಿ ಪಡೆದಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಎಸ್.ಎಂ.ಕೃಷ್ಣ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು 1989, 1999 ಹಾಗೂ 2004ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 1968, 1971 ಹಾಗೂ 1980ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು. 1972ರಲ್ಲಿ ವಿಧಾನಪರಿಷತ್ ಸದಸ್ಯರಾಗಿ, 1996 ರಿಂದ 1999 ಮತ್ತು 2008ರಿಂದ 2014ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಸ್ಪೀಕರ್ ಗುಣಗಾನ ಮಾಡಿದರು.
ಅಲ್ಲದೆ ಎಸ್.ಎಂ.ಕೃಷ್ಣ ವಿಧಾನಸಭೆಯ ಸಭಾಧ್ಯಕ್ಷರಾಗಿ, ಕೈಗಾರಿಕೆ ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಉಪಮುಖ್ಯಮಂತ್ರಿಯಾಗಿ, ನಂತರ ರಾಜ್ಯದ 10ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಕೇಂದ್ರ ಕೈಗಾರಿಕೆ ರಾಜ್ಯ ಸಚಿವರಾಗಿ, ಹಣಕಾಸು ಖಾತೆಯ ರಾಜ್ಯ ಸಚಿವರಾಗಿ, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಅವರು 2008ರಲ್ಲಿ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದರು ಎಂದು ಸ್ಮರಿಸಿದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡಿದ್ದ ಕೃಷ್ಣ ಅವರು ಭೂ ದಾಖಲೆಯನ್ನು ಡಿಜಿಟಲೀಕರಣಗೊಳಿಸುವ, ಸರ್ಕಾರಿ ಮಕ್ಕಳಿಗೆ ಬಿಸಿಯೂಟ ಯೋಜನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಯೋಜನೆ ಜಾರಿಗೆ ತಂದಿದ್ದರು. ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟು ರಾಜ್ಯದಲ್ಲಿ ಐಟಿಬಿಟಿ ಕ್ರಾಂತಿ ಮಾಡಿದ್ದರು. ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿಸಿ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆ ಹೊಂದಿದ್ದರು ಎಂದು ಖಾದರ್ ಶ್ಲಾಘಿಸಿದರು.