ಕರ್ನಾಟಕ

karnataka

ETV Bharat / state

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್ - CONGRESS CANDIDATES

ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್
ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್ (ETV Bharat)

By ETV Bharat Karnataka Team

Published : Oct 24, 2024, 6:31 AM IST

ಬೆಂಗಳೂರು:ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕಾರಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತೊರೆದು ಬುಧವಾರ ಬೆಳಗ್ಗೆಯಷ್ಟೇ ಕಾಂಗ್ರೆಸ್ ಸೇರಿದ ಸಿ.ಪಿ.ಯೋಗೇಶ್ವರ್ ಅವರಿಗೆ ರಾತ್ರಿ ವೇಳೆಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಿದೆ.

ಇನ್ನು ಸಂಡೂರಿಗೆ ಈ.ಅನ್ನಪೂರ್ಣ ತುಕಾರಾಮ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿದೆ. ಗೊಂದಲ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಚನ್ನಪಟ್ಟಣ, ಸಂಡೂರು ಮತ್ತು ಅಸ್ಸೋಂನ ಬೆಹಾಲಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ (ಕಾಂಗ್ರೆಸ್)

ಇಂದು ನಾಮಪತ್ರ ಸಲ್ಲಿಕೆ : ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಅವರಿಗೆ ಟಿಕೆಟ್ ಸಿಕ್ಕಿರುವುದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಎನ್​ಡಿಎ ಕೂಟದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯೋಗೇಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅಥವಾ ಕ್ಷೇತ್ರದ ಬೇರೆ ನಾಯಕರನ್ನು ಸ್ಪರ್ಧಿಸ್ತಾರಾ ಎಂಬುದು ಸದ್ಯದ ಸಸ್ಪೆನ್ಸ್.

ಮಂಗಳವಾರ ಸಂಜೆ ಮೈಸೂರಿಗೆ ಆಗಮಿಸಿದ ಎಐಸಿಸಿಯ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದು, ಯೋಗೇಶ್ವರ್ ಸೇರ್ಪಡೆಗೆ ಹಸಿರು ನಿಶಾನೆ ಪಡೆದುಕೊಂಡಿದ್ದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸಿಪಿವೈ ಮಣಿಸಲು ಎನ್​ಡಿಎ ಮೈತ್ರಿಕೂಟ ರಣತಂತ್ರ: ದೋಸ್ತಿಗಳ ಲೆಕ್ಕಾಚಾರ ಏನು?

ಸಂಡೂರು:ಈ.ತುಕಾರಾಮ್ ಅವರಿಂದ ತೆರವಾದ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ತುಕಾರಾಮ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಈ.ತುಕಾರಾಂ ಅವರು ಬಳ್ಳಾರಿ ಸಂಸದರಾದ ಬಳಿಕ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇನ್ನು ಬಿಜೆಪಿಯಿಂದ ಬಂಗಾರು ಹನಮಂತು ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕಿದ್ದು, ಅವರು ಪ್ರಚಾರದಲ್ಲಿ ತೊಡಗಿದ್ದಾರೆ.

ಶಿಗ್ಗಾಂವಿ ಸಸ್ಪೆನ್ಸ್:ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಘೋಷಣೆ ಕಾಯ್ದಿರಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಈಗಾಗಲೇ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಇವರ ವಿರುದ್ಧ ಕಾಂಗ್ರೆಸ್​ನಿಂದ ಯಾರು ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ 13 ರಂದು ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.

ABOUT THE AUTHOR

...view details