ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಡಿಕೆ ಶಿವಕುಮಾರ್ ಮನವಿ ಪತ್ರವನ್ನು ಕೆಪಿಸಿಸಿ ನಿಯೋಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ವಿಎಸ್ ಉಗ್ರಪ್ಪ ನೇತೃತ್ವದ ನಿಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರೆದ ಮನವಿ ಪತ್ರವನ್ನು ನಿಯೋಗ ಮುಖ್ಯ ಚುನಾವಣಾಧಿಕಾರಿಗೆ ಸಲ್ಲಿಸಿದರು. ಪತ್ರದಲ್ಲಿ ರಾಜ್ಯದ 224 ತಾಲೂಕುಗಳು ತೀವ್ರ ಬರಗಾಲ ಎದುರಿಸುತ್ತಿದೆ. 48 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದ್ದು, ಸುಮಾರು 37,000 ಕೋಟಿ ರೂ.ನಷ್ಟು ಹಾನಿಯಾಗಿದೆ. ಎನ್ಡಿಆರ್ಎಫ್ ಪ್ರಕಾರ ಕನಿಷ್ಠ 4663 ಕೋಟಿ ರೂ. ಬೆಳೆ ಹಾನಿ ಪರಿಹಾರ ಅಗತ್ಯ ಇದೆ. ಈ ಸಂಬಂಧ ನವೆಂಬರ್ನಲ್ಲಿ ಕೇಂದ್ರ ಸರ್ಕಾರಕ್ಕೆ ಬರ ನಷ್ಟದ ಮೆಮೊರಂಡಂ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆಗಾಗಿ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಬರ ಪರಿಹಾರ ಬಿಡುಗಡೆ ಸಂಬಂಧ ಕೇಂದ್ರ ಸರ್ಕಾರ ಮಲತಾಯಿ ದೋರಣೆ ತೋರುತ್ತಿದೆ. ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ವಿಳಂಬ ಮಾಡುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿ, ಅಮಿತ್ ಶಾ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.