ನವದೆಹಲಿ/ಬೆಂಗಳೂರು:ಸಿಎಂ-ಡಿಸಿಎಂ ಹುದ್ದೆ ಗುದ್ದಾಟ ಅಂತ್ಯಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಫರ್ಮಾನು ಹೊರಡಿಸಿ, ಸಂಪುಟ ಪುನಾರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಖ್ಯವಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹಾಗೂ ಸಿಎಂ ಬದಲಾವಣೆಯ ಸಂಬಂಧ ಸಚಿವರು, ಶಾಸಕರ ಬಹಿರಂಗ ಹೇಳಿಕೆಗಳಿಗೆ ಅಂತ್ಯ ಹಾಡುವಂತೆ ಉಭಯ ನಾಯಕರಿಗೆ ಸೂಚಿಸಲಾಗಿದೆ ಎನ್ನಲಾಗಿದೆ.
ಬಹಿರಂಗ ಹೇಳಿಕೆಗಳಿಂದ ಗೊಂದಲ ಉಂಟಾಗಿ ಆಡಳಿತ ಮತ್ತು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಾಗಿ ಸಚಿವರು ಹಾಗೂ ಶಾಸಕರು ಈ ಬಗ್ಗೆ ಬಹಿರಂಗ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದು ಹೈಕಮಾಂಡ್ ತಾಕೀತು ಮಾಡಿದೆ ಎಂದು ಹೇಳಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬಹಿರಂಗ ಹೇಳಿಕೆ ಕೊಡುತ್ತಿರುವ ಸಚಿವರು ಹಾಗೂ ಕೈ ಶಾಸಕರಿಗೆ ಸುಮ್ಮನಿರಲು ಖಡಕ್ ಆಗಿ ಸೂಚನೆ ನೀಡುವಂತೆ ಹೇಳಿದ್ದಾರೆ.
ದೆಹಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದ್ದೇವೆ. ಈ ವೇಳೆ ರಾಜಕೀಯವಾಗಿ ಚರ್ಚೆ ಮಾಡಲಾಯಿತು. ಸೌಹಾರ್ದಯುತವಾಗಿ ಚರ್ಚೆ ಮಾಡಲಾಯ್ತು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ಸಿಎಂ-ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಮಾಡಕೂಡದು. ಇಲ್ಲದಿದ್ರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಹೈಕಮಾಂಡ್ ಭೇಟಿಯಾದ ಸಿಎಂ ಮತ್ತು ರಾಜ್ಯ ನಾಯಕರು (ETV Bharat) ಸಂಪುಟ ಪುನಾರಚನೆಗೆ ಸೂಚನೆ?:ಭೇಟಿ ವೇಳೆ ಸಿಎಂ ಸಿದ್ದರಾಮಯ್ಯಗೆ ಪಕ್ಷದ ಹೈಕಮಾಂಡ್ ಸಂಪುಟ ಪುನಾರಚನೆ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಳಪೆ ಪ್ರದರ್ಶನ ತೋರುತ್ತಿರುವ ಸಚಿವರನ್ನು ಕೈಬಿಟ್ಟು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತ ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಡೆ ಸಂಬಂಧ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ಶಾಸಕರ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಲು ತಿಳಿಸಿದೆ. ಇದರ ಜೊತೆಗೆ ನಾಯಕತ್ವ ತಿಕ್ಕಾಟದ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ. ಸೋಲಿನ ಹೊಣೆಗಾರಿಕೆ ನಿಗದಿ ಮಾಡಿ, ಕಳಪೆ ಪ್ರದರ್ಶನ ತೋರಿರುವ ಕೆಲ ಸಚಿವರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ. ಹೀಗಾಗಿ ಸಂಪುಟ ಪುನಾರಚನೆ ಮಾಡಿ ಹಿರಿಯ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ ಯಾರು?: ಮೂವರ ಪೈಕಿ ಇವರ ಹೆಸರು ಮುಂಚೂಣಿಯಲ್ಲಿ! - Chief Secretary Of Karnataka
ಸಿಎಂ ಪುತ್ರ ಯತೀಂದ್ರ, ವಿನಯ್ ಕುಲಕರ್ಣಿ, ಟಿ.ಬಿ. ಜಯಚಂದ್ರ, ನರೇಂದ್ರ ಸ್ವಾಮಿ ಸೇರಿ ಸುಮಾರು 30ಕ್ಕೂ ಅಧಿಕ ಮಂದಿ ಮಂತ್ರಿಗಿರಿ ಮೇಲೆ ಕಣ್ಣಿಟ್ಟಿದ್ದಾರೆ. ಮುಂದಿನ ಮಳೆಗಾಲದ ಅಧಿವೇಶನ ಬಳಿಕ ಸಂಪುಟ ಪುನರಚನೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ?:ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸದ್ಯದಲ್ಲೇ ರಾಜೀನಾಮೆ ನೀಡಲು ಮುಂದಾಗಲಿದ್ದಾರೆ ಎನ್ನಲಾಗಿದೆ. ಪಕ್ಷದ ನಿಯಮದ ಪ್ರಕಾರ ಎರಡು ಹುದ್ದೆ ನಿಭಾಯಿಸುವಂತಿಲ್ಲ. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಇದರ ಜೊತೆಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿ ಒಂದು ನಿರ್ಧಾರಕ್ಕೆ ಬರಲಿದ್ದಾರೆ. ಈಗಾಗಲೇ ಕೆ.ಎನ್. ರಾಜಣ್ಣ ಸೇರಿ ಕೆಲವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಲವು ವ್ಯಕ್ತಪಡಿಸಿದ್ದಾರೆ.
ಇತ್ತ ತಮ್ಮ ಆಪ್ತರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡುವ ನಿಟ್ಟಿನಲ್ಲಿ ಡಿಕೆಶಿಯೂ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಭೇಟಿ ವೇಳೆಯೂ ಕೆಪಿಸಿಸಿ ಅಧ್ಯಕ್ಷಗಿರಿಯ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ: ಇವತ್ತಿನಿಂದ ಎಲ್ಲಾ ದೂರುಗಳು ಹೊಸ ಅಪರಾಧ ಕಾನೂನಿನಡಿ ದಾಖಲು: ಸಚಿವ ಜಿ. ಪರಮೇಶ್ವರ್ - New Criminal Law