ಬೆಂಗಳೂರು: ಬರ ಪರಿಹಾರ ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ಸಚಿವರು ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಚೊಂಬೇಶ್ವರ ಮೋದಿಗೆ ಎಂಬ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಲೋಕಸಮರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬರ ಪರಿಹಾರ ಬಿಡುಗಡೆ ವಿಳಂಬ, ತೆರಿಗೆ ತಾರತಮ್ಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿದ್ದು, ಶೀಘ್ರದಲ್ಲಿ ಬರ ಪರಿಹಾರ ಬಿಡುಗಡೆಗೊಳಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಶಾಸಕರಾದ ರಿಜ್ವಾನ್ ಅರ್ಷದ್, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ, ಮೇಕೆದಾಟು ಯೋಜನೆ ಅನುಷ್ಠಾನ, ಮಹದಾಯಿ ಯೋಜನೆಗೆ ಅನುಮತಿ ನೀಡುವಂತೆ ಒತ್ತಾಯಿಸಿದರು.
ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು. ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ, ಆದ್ದರಿಂದ ಬೇಡ ಬೇಡ ಖಾಲಿ ಚೊಂಬು ಬೇಡ, ನರೇಂದ್ರ ಚೊಂಬೇಶ್ವರನಿಗೆ, ಭಾರತೀಯ ಚೊಂಬು ಪಾರ್ಟಿಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಗೋ ಬ್ಯಾಕ್, ಗೋಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಗೋ ಬ್ಯಾಕ್ ನಿರ್ಮಲಾ ಸೀತಾರಾಮನ್ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಹೋರಾಟಕ್ಕೆ ಸುಪ್ರೀಂ ಕೋರ್ಟಿನಲ್ಲಿ ಜಯವಾಗಿದೆ. ಇನ್ನೊಂದು ವಾರದಲ್ಲಿ ಬರ ಪರಿಹಾರ ಬಿಡುಗಡೆಗೊಳಿಸುವ ಬಗ್ಗೆ ತೀರ್ಮಾನಿಸುವುದಾಗಿ ಕೋರ್ಟ್ ಹೇಳಿದೆ. ಚುನಾವಣಾ ಆಯೋಗದಿಂದ ಇದಕ್ಕೆ ಅಗತ್ಯವಿದ್ದ ಅನುಮತಿ ಪಡೆದುಕೊಂಡಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಹೇಳಿತ್ತು. ಆ ಮೂಲಕ ರಾಜ್ಯ ಸರ್ಕಾರಕ್ಕೆ ಮೊದಲ ಜಯ ಸಿಕ್ಕಿದೆ. ಅದನ್ನೇ ಅಸ್ತ್ರವಾಗಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬರ ಪರಿಹಾರವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡಸಲಾಗುತ್ತಿದೆ. ರಾಜ್ಯ ಸರ್ಕಾರ ಪಟ್ಟು ಬಿಡದೇ ತನ್ನ ಹೋರಾಟವನ್ನು ಮುಂದುವರೆಸಿ, ಅಂತಿಮವಾಗಿ ಸುಪ್ರೀಂಕೋರ್ಟ್ನಿಂದ ಪರಿಹಾರ ಪಡೆದುಕೊಳ್ಳುವ ಪ್ರಯತ್ನ ಮಾಡಿತು. ಈಗ ಸರ್ವೋಚ್ಛ ನ್ಯಾಯಾಲಯದ ಮಧ್ಯಪ್ರವೇಶದಿಂದ ಪರಿಹಾರ ಸಿಗುವ ಭರವಸೆ ಸಿಕ್ಕಿದೆ ಎಂದು ಕಾಂಗ್ರೆಸ್ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು.
ಇದನ್ನೂ ಓದಿ:ಏ.29ರೊಳಗೆ ಕರ್ನಾಟಕದ ಬರ ಪರಿಹಾರ ಹಣ ಬಿಡುಗಡೆಗೆ ಕ್ರಮ: ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರದ ಭರವಸೆ - Drought Relief Fund