ಬೆಂಗಳೂರು:ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ ನಡೆಸಿ ಸಮಾಲೋಚಿಸಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ಸೋಮವಾರ ಸಂಜೆ ಸಭೆ ಸೇರಿ 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗಿದೆ. ಉಸ್ತುವಾರಿ ಸಚಿವರು ನೀಡಿದ ಅಭ್ಯರ್ಥಿಗಳ ಹೆಸರು, ಅವರ ಅಭಿಪ್ರಾಯ, ಸಿಎಂ ಹಾಗೂ ಡಿಸಿಎಂರಿಂದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.
ಮುಂದಿನ ವಾರ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು, ಅಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ರಣದೀಪ್ ಸಿಂಗ್ ಸುರ್ಜೇವಾಲ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚಿಸಿದ್ದಾರೆ.
ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ಭೈರತಿ ಸುರೇಶ್ ಸೇರಿದಂತೆ ಕೆಲವು ಸಚಿವರು ಹಾಗೂ ಹಲವು ಕೈ ನಾಯಕರು ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿಕೊಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಾ.6ರಂದು ಅಥಣಿ ತಾಲೂಕಿಗೆ ಸಿಎಂ, ಡಿಸಿಎಂ ಭೇಟಿ: ಶಾಸಕ ಲಕ್ಷ್ಮಣ ಸವದಿ