ಬೆಂಗಳೂರು:''ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರ ಪಡೆದಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು. ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಅಸ್ತ್ರವನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸಬೇಕು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ. ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ'' ಎಂದು ತಿಳಿಸಿದರು.
''ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು, ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು'' ಎಂದರು.