ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಜಿದ್ದಾಜಿದ್ದಿ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಕಾರಣ, ಹೇಗಾದರೂ ಮಾಡಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕೆಂದು ಪಕ್ಷ ಹಠಕ್ಕೆ ಬಿದ್ದಿದೆ. ಬಿಜೆಪಿ ಕೂಡ ಎಲ್ಲ 28 ಕ್ಷೇತ್ರಗಳನ್ನೂ ತನ್ನ ತೆಕ್ಕೆಗೆ ತೆಗೆದುಕೊಳ್ಳಲೇಬೇಕೆಂದು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ರಣತಂತ್ರ ಹೆಣೆಯುತ್ತಿದೆ.
ಒಂದೇ ಹೆಸರಿನ ಐವರು ಅಭ್ಯರ್ಥಿಗಳು ಕಣಕ್ಕೆ:ಎರಡು ಪಕ್ಷಗಳು ಚುನಾವಣಾ ತಂತ್ರಗಾರಿಕೆಗೆ ಮುಂದಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಒಂದೇ ಹೆಸರಿನ ಹಲವು ಮಂದಿ ಕಣಕ್ಕಿಳಿದಿದ್ದಾರೆ. ಇದು ಮತಗಳನ್ನು ಒಡೆಯುವ ತಂತ್ರಗಾರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಷ್ಟ್ರಮಟ್ಟದಲ್ಲೂ ಸದ್ದು ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದೇ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಐವರು ಮಂಜುನಾಥ್ ಹಾಗೂ ಮೂವರು ಸುರೇಶ್ ಹೆಸರಿನವರ ನಡುವೆ ಪೈಪೋಟಿ ನಡೆಯುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಡುವಿನ ಪ್ರತಿಷ್ಠೆಯ ಕದನದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಇದರ ಜತೆಗೆ ಸಿ.ಮಂಜುನಾಥ್, ಎನ್.ಮಂಜುನಾಥ್, ಮಂಜುನಾಥ್.ಕೆ ಮತ್ತು ಸಿ.ಎನ್.ಮಂಜುನಾಥ್, ಎಸ್.ಸುರೇಶ್ ಮತ್ತು ಎಂ.ಎನ್.ಸುರೇಶ್ ಕಣಕ್ಕಿಳಿದು ಕ್ಷೇತ್ರದ ಮತದಾರರ ಗಮನ ಸೆಳೆಯಲು ಪೈಪೋಟಿ ನಡೆಸುತ್ತಿದ್ದಾರೆ.
ಆದರೆ ಇದು ಕೇವಲ ಒಂದು ಕ್ಷೇತ್ರದ ಕಥೆಯಲ್ಲ ಮತ್ತು ಇದೇ ಮೊದಲ ಬಾರಿಗೂ ನಡೆಯುತ್ತಿಲ್ಲ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‍ನ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದು, ಇನ್ನಿಬ್ಬರು ಸುಧಾಕರ್ ಕಣಕ್ಕಿಳಿದಿದ್ದಾರೆ. ಡಿ.ಸುಧಾಕರ್ ಮತ್ತು ಕೆ.ಸುಧಾಕರ್ ಎಂಬ ಇಬ್ಬರು ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಸುರೇಶ್ ಪೂಜಾರಿ ಮತ್ತು ಸುಪ್ರೀತ್ ಪೂಜಾರಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ಮುದ್ದಹನುಮೇಗೌಡ ವಿರುದ್ಧ ಹನುಮಯ್ಯ ಎಂಬವರು ಕಣಕ್ಕಿಳಿದಿದ್ದಾರೆ.