ಹುಬ್ಬಳ್ಳಿ:ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗುತ್ತಿದ್ದು, ಸಮಾಜವನ್ನು ಕಡೆಗಣಿಸಲಾಗಿದೆ. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ ಕುನ್ನೂರು ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆ ಬಯಸಿ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಿದ್ದೆ, ಆದರೆ, ಹೈಕಮಾಂಡ್ ಕಡೆಗಣಿಸಿದೆ. ಇದರಿಂದ ಅನ್ಯಾಯವಾಗಿದ್ದು, ಕಾಂಗ್ರೆಸ್ನಲ್ಲಿ ಕುಟುಂಬ ರಾಜಕಾರಣ ಮಿತಿ ಮೀರಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ರಾಜಕಾರಣ ಹೆಚ್ಚಿದೆ. ಇದರಿಂದ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಚಿಂತನೆ ನಡೆಸಿದ್ದೇನೆ ಎಂದರು.
ಹಿತೈಷಿಗಳು, ಸಮಾಜದ ಮುಖಂಡರು ಹಾಗೂ ಧಾರ್ಮಿಕ ಮುಖಂಡರು ಸ್ಪರ್ಧೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅಣಿಯಾಗುತ್ತಿದ್ದೇನೆ. ಏಪ್ರಿಲ್ 12 ರಿಂದ ಏ.19 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮೊದಲು ಬೆಂಬಲಿಗರು, ಹಿತೈಷಿಗಳ ಸಭೆ ಕರೆದು ಸ್ಪರ್ಧೆಯ ರೂಪುರೇಷೆಗಳನ್ನು ಚರ್ಚಿಸಿ ಸೂಕ್ತ ತಿರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಒಂದು ವೇಳೆ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದರೇ, ನಾನು ಕಣದಿಂದ ಹಿಂದೆ ಸರಿಯುತ್ತೇನೆ. ಆದರೆ, ನಾನು ಸ್ಪರ್ಧೆ ಮಾಡಿದರೇ ಸ್ವಾಮೀಜಿ ಬೆಂಬಲ ಕೇಳುವುದಿಲ್ಲ. ನಾನು ಈ ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೈಗೊಂಡ ಕೆಲಸಗಳು ಹಾಗೂ ನಿರಂತರ ಜನಸಂಪರ್ಕ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮಂಜುನಾಥ ಕುನ್ನೂರು ವಿಶ್ವಾಸ ವ್ಯಕ್ತಪಡಿಸಿದರು.
ಓದಿ:'ಸಿಎಂ ಸಿದ್ದರಾಮಯ್ಯ ಅಹಂಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು': ಹೆಚ್.ಡಿ. ದೇವೇಗೌಡ - HD Deve Gowda