ಬೆಂಗಳೂರು:ಪೂರ್ವ ಮುಂಗಾರು ಮಳೆ ಪ್ರಾರಂಭಕ್ಕೂ ಮುಂಚಿತವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಗೆ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು, ಕುಡಿಯುವ ನೀರು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆ ಪ್ರಾರಂಭವಾಗುವ ಹಿನ್ನೆಲೆ ಆಯಾ ವಲಯ ವ್ಯಾಪ್ತಿಯಲ್ಲಿ ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಯಾ ವಲಯ ವ್ಯಾಪ್ತಿಯಲ್ಲಿ ಈಗಲೇ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ, ಈ ಪ್ರದೇಶಗಳಲ್ಲಿ ಪ್ರವಾಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಅಲ್ಲದೇ ರಸ್ತೆ ಬದಿಯ ಡ್ರೈನೇಜ್ಗಳು ಸ್ವಚ್ಛವಾಗಿರುವಂತೆ ನೋಡಿಕೊಂಡು ರಸ್ತೆ ಮೇಲೆ ಬಿದ್ದಂತಹ ನೀರು ಸರಾಗವಾಗಿ ಹೋಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ :ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಆಯಾ ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು. ಪಾಲಿಕೆ ಪೊರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ಗಳನ್ನು ಈಗಾಗಲೇ ವಲಯವಾರು ನಿಯೋಜನೆ ಮಾಡಲಾಗಿದ್ದು, ನೀರು ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.