ಬೆಂಗಳೂರು:ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ಅರ್ಜಿಯ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಅರ್ಜಿದಾರರಿಗೆ ಬಂಧನ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಜ್ವಲ್ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್‌ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ತಿಳಿಸಿದ್ದಾರೆ.