ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂ. ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಆರ್ಟಿಐ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಯಲಲಿತಾ ಅವರ ಒಡೆವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಿದೆ. ಅಲ್ಲದೆ, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ಐದು ಕೋಟಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ಇದಕ್ಕೂ ಮುನ್ನ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವ ಕಿರಣ್ ಎಸ್. ಜವಳಿ, ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು.