ಬೆಂಗಳೂರು:ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಹೂಡಿರುವ ಮಾನನಷ್ಟ ಪ್ರಕರಣದ ಹಿನ್ನೆಲೆಯಲ್ಲಿ ವಿಧಾನಸಭೆಯ ಮಾಜಿ ಉಪಸಭಾಧ್ಯಕ್ಷ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಎನ್.ಆರ್.ರಮೇಶ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್) ನ್ಯಾಯಾಲಯ ಈ ಆದೇಶ ಮಾಡಿದೆ. ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಕೃಷ್ಣಾರೆಡ್ಡಿ ಅವರಿಗೆ ಈ ಹಿಂದಿನ ವಿಚಾರಣೆ ವೇಳೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಆದರೆ, ಅವರು ಗೈರಾಗಿದ್ದರು. ಸಮನ್ಸ್ ಇನ್ನೂ ಜಾರಿಯಾಗದ ಕಾರಣ ಇದೀಗ ಮತ್ತೊಂದು ಸಮನ್ಸ್ ಜಾರಿ ಮಾಡಿ ಆದೇಶಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು?:ಬೆಂಗಳೂರು ನಗರದ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರ ವ್ಯಾಪ್ತಿಗೊಳಪಡುವ ಕತ್ರಿಗುಪ್ಪೆಯ ಸರ್ವೇ ನಂಬರ್ 125 ಮತ್ತು 126ಕ್ಕೆ ಸೇರಿದ ಸುಮಾರು 350 ಕೋಟಿ ರೂಪಾಯಿ ಮೌಲ್ಯದ 4.31 ಎಕರೆ ಬಿ ಖರಾಬು ಜಮೀನಿಗೆ 41 ಮಂದಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದಾರೆ ಎಂದು ರಮೇಶ್ ಆರೋಪಿಸಿದ್ದರು. ಅಲ್ಲದೆ, ಆರೋಪ ಸಂಬಂಧ ಲೋಕಾಯುಕ್ತ ಮತ್ತು ಬೆಂಗಳೂರು ಮಹಾನಗರ ಕಾರ್ಯಪಡೆಯಲ್ಲಿ (ಬಿಎಂಟಿಎಫ್) ದೂರು ಸಲ್ಲಿಸಿದ್ದರು.