ಬೆಂಗಳೂರು :ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಚುನಾವಣಾ ಬಾಂಡ್‌ಗಳ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಈ ದೂರನ್ನು ವಿಚಾರಣೆಗೆ ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಿದೆ.
42ನೇ ಎಸಿಎಂಎಂ ನ್ಯಾಯಾಲಯಕ್ಕೆ ಜನಾಧಿಕಾರ ಸಂಘರ್ಷ ಪರಿಷತ್ ಕಳೆದ ಏಪ್ರಿಲ್ ನಲ್ಲಿ ಸಲ್ಲಿಸಲಾಗಿದ್ದ ದೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ನಾಯಕರು, ಆಗಿನ ಬಿಜೆಪಿ ಕರ್ನಾಟಕ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ, ಇವರ ಮೇಲೆ ದೂರು ನೀಡಿದ್ದರು.
ಈ ದೂರನ್ನು ಪರಿಗಣಿಸಿರುವ ನ್ಯಾಯಾಲಯವು ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ದೂರುದಾರರಾದ ಆದರ್ಶ ಅಯ್ಯರ್ '' ಈ ಟಿವಿ ಭಾರತಕ್ಕೆ '' ದೂರವಾಣಿ ಮೂಲಕ ತಿಳಿಸಿದ್ದಾರೆ. ದೂರುದಾರರ ಪರವಾಗಿ ಹಿರಿಯ ವಕೀಲ ಬಾಲನ್ ವಾದ ಮಾಡಿದ್ದರು. ಈ ಪ್ರಕರಣದ ವಿಚಾರಣೆಯನ್ನ ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ :ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ: ಹೆಚ್ ಡಿ ಕುಮಾರಸ್ವಾಮಿ - union Minister H D Kumaraswamy