ಮಂಗಳೂರು:ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 26 ವರ್ಷದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಶಿಕ್ಷೆಗೊಳಗಾದ ಯುವಕ ಬೆಳ್ತಂಗಡಿ ತಾಲೂಕಿನವ. 2020ರಲ್ಲಿ ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಅಪ್ರಾಪ್ತೆಯು ಗರ್ಭಿಣಿಯಾಗಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ - ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.