ರಾಮನಗರ: "ಎನ್ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ" ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು, "ಕ್ಷೇತ್ರದ ಎನ್ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ನನ್ನ ಪರವಾಗಿ ಮಾತನಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದು, ಅವರೂ ಸಹ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ನೋಡಿಕೊಂಡು ಬರುವ ಸೋಮವಾರ ಮೈತ್ರಿ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದೇನೆ" ಎಂದು ತಿಳಿಸಿದರು.