ಬೆಂಗಳೂರು:ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಜ.9ರಂದು ಟಿಪ್ಪಣಿ ಬರೆದಿದ್ದರು.
ಟಿಪ್ಪಣಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ/ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ, ಸಮಾಲೋಚಕರು/ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೇ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ತಿಳಿಸಿದ್ದಾರೆ.