ಬೆಂಗಳೂರು/ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದ ನಂತರ ನಡೆದಿರುವ ವಿದ್ಯಮಾನಗಳ ಕುರಿತು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗ ಇಂದು ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರನ್ನು ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದೆ.
ನಿಯೋಗದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್ ಇದ್ದರು.
ಸಿ.ಟಿ.ರವಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಖಂಡನೀಯ. ಬಂಧನದ ವೇಳೆ ಸಾಂವಿಧಾನಿಕ ಹಾಗೂ ಕಾನೂನು ಉಲ್ಲಂಘನೆಯಾಗಿದೆ. ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆಯಾಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಬೇಕು ಎಂದು ನಿಯೋಗ ಮನವಿ ಮಾಡಿದೆ.
ಕಳೆದ ಗುರುವಾರ ಸಂಜೆ 6.30ರ ಸುಮಾರಿಗೆ ಬೆಳಗಾವಿ ಸುವರ್ಣಸೌಧದಿಂದ ಹೊರಬರುತ್ತಿದ್ದಂತೆ ಸಿ.ಟಿ.ರವಿ ಅವರನ್ನು ಬಂಧಿಸಿ ಇಡೀ ರಾತ್ರಿ ಎಲ್ಲಿಗೆ ಕರೆದೊಯ್ಯಲಾಗಿತ್ತು. ಅವರನ್ನು ಸುತ್ತಾಡಿಸಿದ್ದು ಏಕೆ? ಸಂಪೂರ್ಣವಾದ ತನಿಖೆಗೆ ನಿರ್ದೇಶನ ನೀಡಬೇಕೆಂದು ನಿಯೋಗ ಕೋರಿದೆ.
ನ್ಯಾಯಾಂಗ ತನಿಖೆಗೆ ಆಗ್ರಹ: ರಾಜ್ಯಪಾಲರ ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, "ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ" ಎಂದು ಹೇಳಿದರು.