ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ - KARNATAKA RAIN FORECAST

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ (ಹವಾಮಾನ ಇಲಾಖೆ)

By ETV Bharat Karnataka Team

Published : Oct 13, 2024, 6:39 PM IST

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ಚಂಡಮಾರುತ ಮತ್ತು ಅರಬ್ಬಿ ಸುಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಅಕ್ಟೋಬರ್ 17 ರ ಬೆಳಗ್ಗೆಯಿಂದ 18 ರ ಬೆಳಗಿನ ಜಾವದವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.

ಅಲ್ಲದೆ ಪ್ರತ್ಯೇಕವಾಗಿ ಅಕ್ಟೋಬರ್ 15 ರಿಂದ 17ರ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ 18ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅಕ್ಟೋಬರ್ 17 ರಂದು ಯೆಲ್ಲೋ ಅಲರ್ಟ್ ಇರಲಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂದಿನ ಎರಡು ದಿನ ಲಘು ಮಳೆ:ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

"ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ವಾಯು ಚಂಡಮಾರುತವು ಈಗ ಉತ್ತರದ ಒಳಭಾಗದ ತಮಿಳುನಾಡಿನ ಮೇಲೆ ನೆಲೆಗೊಂಡಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ. ವರೆಗೆ ಎತ್ತರದಲ್ಲಿದೆ ಮತ್ತು ನೈಋತ್ಯಕ್ಕೆ ವಾಲುತ್ತದೆ. ಇನ್ನೊಂದು ಟ್ರಫ್ ಪೂರ್ವ ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರದ ಮೇಲಿದ್ದು ದಕ್ಷಿಣ ಕೇರಳದಿಂದ ಕೊಮೊರಿನ್ ಪ್ರದೇಶದವರೆಗೆ ಸಾಗಲಿದೆ. ಚಂಡಮಾರುತ ಮತ್ತು ವಾಯುಭಾರ ಕುಸಿತಗಳ ಪರಿಣಾಮ ಮೂರು ದಿನದ ನಂತರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ನಿನ್ನೆಯಿಂದ ಕರಾವಳಿ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮತ್ತು ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಮತ್ತು ಮೈಸೂರಿನ ನಂಜನಗೂಡಿನಲ್ಲಿ ಅತಿ ಹೆಚ್ಚು ಅಂದರೆ 5 ಸೆಂ.ಮೀ ಮಳೆ ದಾಖಲಾಗಿದೆ - ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್. ಪುವಿಯರಸನ್

ಇದನ್ನೂ ಓದಿ:ಅಂಬಾರಿ ಕೊಡುವುದು ತಡವಾಯಿತು ಎಂಬ ವಿಚಾರಕ್ಕೆ ಸ್ವತಃ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

ಇದನ್ನೂ ಓದಿ: ಧಾರವಾಡದಲ್ಲಿ ನಿರಂತರ ಮಳೆಗೆ ಕೊಚ್ಚಿ ಹೋದ ಸೇತುವೆ: ಹಗ್ಗವೇ ಜನರಿಗಿಲ್ಲಿ ಆಸರೆ

ABOUT THE AUTHOR

...view details