ಬೆಂಗಳೂರು:ಲೋಕಸಭಾ ಚುನಾವಣೆ ನಿಮಿತ್ತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಮತದಾನ ಜಾಗೃತಿಯ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಮಾತನಾಡಿದ ತುಷಾರ್ ಗಿರಿನಾಥ್ ಅವರು, "ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಹಾಗೂ ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಮತದಾನ ನಡೆಯುತ್ತಿದೆ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೇ ಮತ ಚಲಾಯಿಸೋಣ ಎಂದು ಕರೆ ನೀಡಿದರು". ಜತೆಗೆ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ" ಎಂದರು.