ಬೆಂಗಳೂರು:ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಕೋರ್ಸ್ಗಳಿಗೆ ಪ್ರವೇಶಕ್ಕೆ ಜೂನ್ 22ಕ್ಕೆ ನಿಗದಿಯಾಗಿರುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 ಆನ್‌ಲೈನ್ ಬದಲು ಆಫ್ ಲೈನ್ ಮಾದರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಈ ಪರೀಕ್ಷೆ (ಡಿಸಿಇಟಿ-2024)ಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದೆಂದು ಈ ಮುಂಚೆ ತಿಳಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಓಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.