ಕರ್ನಾಟಕ

karnataka

ETV Bharat / state

ವಿವಿ, ವಿದ್ಯಾರ್ಥಿಗಳ ಹಿತದೃಷ್ಟಿಗೆ ತಕ್ಕಂತೆ ಸಂಪುಟ ಉಪ ಸಮಿತಿಯಿಂದ ತೀರ್ಮಾನ: ಡಿ.ಕೆ.ಶಿವಕುಮಾರ್ - DCM D K SHIVAKUMAR

ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಗೆ ತಕ್ಕಂತೆ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

dcm-d-k-shivakumar-reacts-on-cabinet-sub-committee-decisions-of-universities
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Feb 14, 2025, 10:37 PM IST

ಬೆಂಗಳೂರು:''ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯದ ವಿವಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆಯ ತೀರ್ಮಾನಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ''ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿವಿಗೆ ಕೇವಲ 2 ಕೋಟಿ ರೂ. ಹಣ ಮೀಸಲಿಟ್ಟಿದ್ದರು. ಯಾವುದೇ ಜಮೀನು ನೀಡಿರಲಿಲ್ಲ. ಮಂಡ್ಯ, ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿವಿಗೆ ಮೊದಲ ಆದ್ಯತೆ ನೀಡಿದ ಪರಿಣಾಮ ಇತರೇ ವಿವಿಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು'' ಎಂದರು.

ಸಂಪುಟದಲ್ಲಿ ಚರ್ಚೆ ಬಳಿಕ ಸಂಪೂರ್ಣ ಮಾಹಿತಿ: ''ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು. ಈ ಬಗ್ಗೆ ನಾವು ಚರ್ಚೆ ಮಾಡಿ, ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ. ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು, ಇನ್ನೂ ಅದನ್ನು ನೀಡಲು ಆಗಿಲ್ಲ. ಮಾಹಿತಿ ಕೊಟ್ಟ ನಂತರ ಸಚಿವ ಸಂಪುಟ ಸಭೆಯ ಮುಂದಿಡುತ್ತೇವೆ. ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು'' ಎಂದು ಮಾಹಿತಿ ನೀಡಿದರು.

ಅಗತ್ಯಬಿದ್ದರೆ ಈ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತೀರಾ ಎಂಬ ಬಗ್ಗೆ ಪ್ರತಿಕ್ರಿಯಿಸಿ, ''ರಾಜ್ಯ, ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ. ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ. ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ. ಪ್ರಾಧ್ಯಾಪಕರು ಮಂಡ್ಯ, ಚಾಮರಾಜನಗರಕ್ಕೆ ಹೋಗಲು ತಯಾರಿಲ್ಲ. ಅವರು ತಮ್ಮ ಹಿರಿತನ ಹಾಗೂ ಪಿಂಚಣಿ ವ್ಯವಸ್ಥೆ ಗಮನದಲ್ಲಿಟ್ಟಕೊಂಡು ಹಿಂಜರಿಯುತ್ತಿದ್ದಾರೆ. ಈ ವಿಚಾರವಾಗಿ ಬಂದಿರುವ ಸಲಹೆಗಳನ್ನು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ'' ಎಂದು ತಿಳಿಸಿದರು.

ಇದನ್ನೂ ಓದಿ:ಉದಯಗಿರಿ ಪ್ರಕರಣದ ತಪ್ಪಿತಸ್ಥರು ಯಾರೇ ಇದ್ರೂ ಮುಲಾಜಿಲ್ಲದೆ ಕ್ರಮ ಜರುಗಿಸಿ: ಸಿಎಂ

ABOUT THE AUTHOR

...view details