ಕರ್ನಾಟಕ

karnataka

ETV Bharat / state

ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಅಧಿವೇಶನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ: ಡಿ.ಕೆ.ಶಿವಕುಮಾರ್ - CONGRESS SESSION CENTENARY PROGRAM

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮಾಹಿತಿ ನೀಡಿದರು.

d k shivakumar
ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Dec 22, 2024, 7:11 AM IST

ಬೆಂಗಳೂರು:ನಮ್ಮ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂಬುದು ಮತ್ತು ಮುಂದಿನ ದಿನಗಳಲ್ಲಿ ಪಕ್ಷದ ಹೋರಾಟದ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆ ಶನಿವಾರ ನಡೆಸಿದರು.

ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್, ''ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ತಿಂಗಳು 26 ಹಾಗೂ 27ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ'' ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ (ETV Bharat)

ಪಕ್ಷಾತೀತವಾಗಿ ಎಲ್ಲಾ ಶಾಸಕರಿಗೆ ಆಹ್ವಾನ: ''ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರಿಗೆ ಆಹ್ವಾನ ನೀಡಲಾಗುವುದು. ಡಿ.26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, 150 ಸಂಸದರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ'' ಎಂದು ಮಾಹಿತಿ ನೀಡಿದರು.

''ಡಿ.27ರಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಅನೇಕ ರಾಷ್ಟ್ರೀಯ ನಾಯಕರು ಮಾತನಾಡಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಸ್ವಇಚ್ಛೆಯಿಂದ ಭಾಗವಹಿಸಲಿದ್ದಾರೆ'' ಎಂದು ಹೇಳಿದರು.

''ಇದಕ್ಕೂ ಮುನ್ನ ಡಿ.27ರಂದು ಬೆಳಗ್ಗೆ ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆ ಅನಾವರಣ ಮಾಡಲಾಗುವುದು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಉಭಯ ಸದನಗಳ ಸ್ಪೀಕರ್ ಹಾಗೂ ಸಭಾಪತಿಗಳು, ವಿರೋಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಸಕರು, ಸಂಸದರು ಹಾಗೂ ಅತಿಥಿಗಳಿಗೆ ಮಾತ್ರ ಅವಕಾಶವಿದ್ದು, ಭದ್ರತೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ'' ಎಂದು ತಿಳಿಸಿದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದೇ ಎಂದು ಕೇಳಿದಾಗ, ''ಈ ವಿಚಾರವಾಗಿ ಎಐಸಿಸಿ ತೀರ್ಮಾನ ಮಾಡಲಿದೆ. ಕೆಲವು ಅಜೆಂಡಾಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾದಾಗ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗು ಜವಾಹರಲಾಲ್ ನೆಹರೂ ಅವರು ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆ ಅಧಿವೇಶನದಲ್ಲಿ ಹಲವು ತೀರ್ಮಾನಗಳನ್ನು ಮಾಡಲಾಗಿತ್ತು. ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಪಕ್ಷ ಅನೇಕ ತೀರ್ಮಾನಗಳನ್ನು ಮಾಡಲಿದೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಅಂಗವೈಕಲ್ಯ ಎಂದು ಕೈಕಟ್ಟಿ ಕೂರದ ಮಹಿಳೆ; ಸ್ವಾವಲಂಬಿ ಜೀವನಕ್ಕೆ ಸ್ಫೂರ್ತಿ ಕೊಪ್ಪಳದ ಜಯಶ್ರೀ

ABOUT THE AUTHOR

...view details